ಜಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಜಗಳೂರು ವತಿಯಿಂದ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಪದವಿ ಶಿಕ್ಷಣದ ಕುರಿತು ಅರಿವು ಮೂಡಿಸುವ ಹಾಗೂ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಬೆಳೆಸುವ ಉದ್ದೇಶದಿಂದ ‘ಹೊಸದಿಗಂತ–2026’ ಅಭಿವಿನ್ಯಾಸ ಕಾರ್ಯಕ್ರಮವನ್ನು ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಯಿತು.
ಕಾರ್ಯಕ್ರಮದಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳು ಹಾಗೂ ಭಾಗವಹಿಸಿದ್ದರು. ಪದವಿ ಶಿಕ್ಷಣದ ಮಹತ್ವ, ಕಾಲೇಜಿನ ಶೈಕ್ಷಣಿಕ ಚಟುವಟಿಕೆಗಳು, ವಿದ್ಯಾರ್ಥಿಗಳಿಗೆ ಲಭ್ಯವಿರುವ ವಿವಿಧ ಸೌಲಭ್ಯಗಳು, ಶಿಸ್ತು, ಪರೀಕ್ಷಾ ವ್ಯವಸ್ಥೆ, ಪಠ್ಯೇತರ ಚಟುವಟಿಕೆಗಳು ಹಾಗೂ ಮುಂದಿನ ಶೈಕ್ಷಣಿಕ ಮತ್ತು ವೃತ್ತಿ ಅವಕಾಶಗಳ ಕುರಿತು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರು ಮಾತನಾಡಿ, ಪದವಿ ಶಿಕ್ಷಣವು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಮಹತ್ವದ ಹಂತವಾಗಿದ್ದು, ವಿದ್ಯಾರ್ಥಿಗಳು ತರಗತಿ ಚಟುವಟಿಕೆಗಳ ಜೊತೆಗೆ ಕೌಶಲ್ಯಾಭಿವೃದ್ಧಿ, ಸ್ಪರ್ಧಾತ್ಮಕ ಪರೀಕ್ಷೆ, ಸಂವಹನ ಕೌಶಲ್ಯ ಹಾಗೂ ವ್ಯಕ್ತಿತ್ವ ವಿಕಸನಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಮತ್ತು ಪಠ್ಯೇತರ ಚಟುವಟಿಕೆಗಳು, ಶೈಕ್ಷಣಿಕ ಮಾರ್ಗದರ್ಶನ, ಉದ್ಯೋಗಾವಕಾಶಗಳು ಹಾಗೂ ವಿದ್ಯಾರ್ಥಿ ಕಲ್ಯಾಣಕ್ಕೆ ಸಂಬಂಧಿಸಿದ ವಿಷಯಗಳ ಕುರಿತು ಸಂಭಂದಪಟ್ಟ ಸಂಚಾಲಕರು ಮಾಹಿತಿ ನೀಡಿದರು. ಹೊಸದಾಗಿ ಕಾಲೇಜಿಗೆ ಪ್ರವೇಶ ಪಡೆದ ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ತಮ್ಮ ಪದವಿ ಶಿಕ್ಷಣವನ್ನು ಆರಂಭಿಸಲು ಕಾರ್ಯಕ್ರಮವು ಪ್ರೇರಣೆಯಾಯಿತು.
ಕಾಲೇಜಿನ ವಿವಿಧ ವಿಭಾಗಗಳ ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮವು ವಿದ್ಯಾರ್ಥಿಗಳಿಗೆ ಕಾಲೇಜು ಜೀವನದ ಬಗ್ಗೆ ಸಮಗ್ರ ಪರಿಚಯ ನೀಡುವ ಮೂಲಕ *“ಪದವಿ ಶಿಕ್ಷಣಕ್ಕೆ ಆತ್ಮವಿಶ್ವಾಸದ ಆರಂಭ” ಎಂಬ ಆಶಯವನ್ನು ಸಾಕಾರಗೊಳಿಸಿತು