ಕಲಬುರಗಿ: 79ನೇ ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗುರುವಾರ ಕಲಬುರಗಿಯಲ್ಲಿ ಧ್ವಜಾರೋಹಣ ನೆರವೇರಿಸಿ, ಗೌರವ ರಕ್ಷೆ ಸ್ವೀಕರಿಸಿದರು. ಬಳಿಕ ಪಥಸಂಚಲನ ವೀಕ್ಷಿಸಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದರು.
ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಸರ್ಕಾರ ಕೈಗೊಂಡಿರುವ ವಿವಿಧ ಯೋಜನೆಗಳು ಹಾಗೂ ಮುಂದಿನ ದಿನಗಳಲ್ಲಿ ಅನುಷ್ಠಾನಗೊಳ್ಳಲಿರುವ ಹಲವು ಹೊಸ ಯೋಜನೆಗಳನ್ನು ಮುಖ್ಯಮಂತ್ರಿ ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದರು.

‘ಕಲ್ಯಾಣ ಕರ್ನಾಟಕದ ಕಲ್ಯಾಣವೇ ಆದ್ಯತೆ’
ಕಲ್ಯಾಣ ಕರ್ನಾಟಕವು ಬಸವಣ್ಣನವರ ಸಾಮಾಜಿಕ ಕ್ರಾಂತಿ, ಸಮಾನತೆ, ಮಾನವೀಯತೆ ಮತ್ತು ಸಹಬಾಳ್ವೆಯ ಸಂದೇಶಗಳನ್ನು ನೀಡಿದ ನೆಲ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.
“ಕಟ್ಟಡಗಳ ನಿರ್ಮಾಣದ ಜೊತೆಗೆ ಕಟ್ಟಕಡೆಯ ವ್ಯಕ್ತಿಯ ನೆಮ್ಮದಿಯ ಬದುಕೇ ಅಭಿವೃದ್ಧಿಯ ಮಾನದಂಡ” ಎಂದು ಅವರು ಹೇಳಿದರು. ಸರ್ಕಾರದ ಯೋಜನೆಗಳು ಜನರ ಮನೆಬಾಗಿಲಿಗೆ ತಲುಪಬೇಕು ಎಂಬ ಉದ್ದೇಶದಿಂದ ಪ್ರಜಾಸೇವೆ ಅಭಿಯಾನಗಳನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಪ್ರತಿ ತಿಂಗಳ ಎರಡನೇ ಮತ್ತು ನಾಲ್ಕನೇ ಶನಿವಾರ ಸಚಿವರು, ಶಾಸಕರು ಸೇರಿದಂತೆ ಜನಪ್ರತಿನಿಧಿಗಳು ಜಿಲ್ಲೆ, ತಾಲೂಕು ಹಾಗೂ ಹೋಬಳಿ ಮಟ್ಟದಲ್ಲಿ ಪ್ರಜಾಸೇವೆ ಅಭಿಯಾನ ನಡೆಸುತ್ತಿದ್ದಾರೆ ಎಂದು ಅವರು ಹೇಳಿದರು.
ಕಲ್ಯಾಣ ಕರ್ನಾಟಕ ಎಕಾನಮಿ ಮಿಷನ್
ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಕೈಗಾರಿಕಾ ಬೆಳವಣಿಗೆ ಮತ್ತು ಹೂಡಿಕೆಗೆ ವೇಗ ನೀಡಲು ಕಲ್ಯಾಣ ಕರ್ನಾಟಕ ಎಕಾನಮಿ ಮಿಷನ್ ಸ್ಥಾಪಿಸುವುದಾಗಿ ಮುಖ್ಯಮಂತ್ರಿ ಘೋಷಿಸಿದರು.
ಸೆಕ್ಷನ್ ೮ ಕಂಪನಿಯಾಗಿ ಮಿಷನ್ ಸ್ಥಾಪಿಸಲಾಗುವುದು. ದೊಡ್ಡ ಪ್ರಮಾಣದ ಹೂಡಿಕೆಗಳನ್ನು ಆಕರ್ಷಿಸುವುದು ಮತ್ತು ಪ್ರದೇಶದಲ್ಲಿ ಹೊಸ ಆರ್ಥಿಕ ಅವಕಾಶಗಳನ್ನು ಸೃಷ್ಟಿಸುವುದು ಇದರ ಉದ್ದೇಶವಾಗಿದೆ ಎಂದು ಅವರು ತಿಳಿಸಿದರು.

ಕೃಷಿ ಉತ್ಪನ್ನಗಳ ಮೌಲ್ಯವರ್ಧನೆಗೆ ಬಯೋ ಎಕಾನಮಿ ಮಿಷನ್
ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ಮೌಲ್ಯವರ್ಧನೆಯ ಮೂಲಕ ರೈತರ ಆದಾಯ ಹೆಚ್ಚಿಸುವ ಉದ್ದೇಶದಿಂದ ಬಯೋ ಎಕಾನಮಿ ಮಿಷನ್ ಸ್ಥಾಪಿಸಲಾಗುವುದು ಎಂದು ಘೋಷಿಸಲಾಯಿತು.
ತೊಗರಿ ಬೇಳೆ, ಕಮಲಾಪುರ ಬಾಳೆಹಣ್ಣು, ಒಣದ್ರಾಕ್ಷಿ ಹಾಗೂ ಸಿರಿಧಾನ್ಯ ಸೇರಿದಂತೆ ಕಲ್ಯಾಣ ಕರ್ನಾಟಕದ ಪ್ರಮುಖ ಕೃಷಿ ಉತ್ಪನ್ನಗಳಿಗೆ ಮೌಲ್ಯವರ್ಧನೆ ಮತ್ತು ಸಂಸ್ಕರಣೆಗೆ ಆದ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು.
ಎರಡು ವರ್ಷಗಳ ಕಾಲ ರಕ್ತಹೀನತೆ ವಿರುದ್ಧ ವಿಶೇಷ ಅಭಿಯಾನ
ಕಲ್ಯಾಣ ಕರ್ನಾಟಕದಲ್ಲಿ ರಕ್ತಹೀನತೆ ಪ್ರಮಾಣ ಕಡಿಮೆ ಮಾಡಲು ಮುಂದಿನ ಎರಡು ವರ್ಷಗಳ ಕಾಲ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗುವುದು ಎಂದು ಡಿ.ಕೆ. ಶಿವಕುಮಾರ್ ಹೇಳಿದರು.
ತಪಾಸಣೆ, ತಡೆಗಟ್ಟುವಿಕೆ ಮತ್ತು ಚಿಕಿತ್ಸೆಗೆ ಒತ್ತು ನೀಡಲಾಗುವುದು. ವಿಶೇಷವಾಗಿ ಗರ್ಭಿಣಿಯರು, ಹದಿಹರೆಯದವರು ಹಾಗೂ ಹಾಲುಣಿಸುವ ತಾಯಂದಿರ ಆರೋಗ್ಯದ ಮೇಲೆ ಹೆಚ್ಚಿನ ಗಮನ ಹರಿಸಲಾಗುವುದು ಎಂದು ತಿಳಿಸಿದರು.
ಕಲಬುರಗಿಯಲ್ಲಿ ೩೦ ಎಕರೆ ಐಟಿ ಪಾರ್ಕ್
ಕಲಬುರಗಿಯಲ್ಲಿ ೩೦ ಎಕರೆ ಪ್ರದೇಶದಲ್ಲಿ ಐಟಿ ಪಾರ್ಕ್ ಅಭಿವೃದ್ಧಿಪಡಿಸುವುದಾಗಿ ಮುಖ್ಯಮಂತ್ರಿ ಘೋಷಿಸಿದರು.
ಇದರ ಜೊತೆಗೆ ನಾವೀನ್ಯತೆ, ಸ್ಟಾರ್ಟ್‌ಅಪ್‌ಗಳು ಮತ್ತು ಯುವ ಉದ್ಯಮಿಗಳನ್ನು ಉತ್ತೇಜಿಸಲು ಏಖIಙಂ - ಏಚಿಟಚಿbuಡಿಚಿgi ಖeseಚಿಡಿಛಿh, Iಟಿಟಿovಚಿಣioಟಿ ಚಿಟಿಜ ಙouಣh ಂಛಿಛಿeಟeಡಿಚಿಣoಡಿ ಸ್ಥಾಪಿಸಲಾಗುವುದು ಎಂದು ಹೇಳಿದರು.
ಕಲಬುರಗಿಯಲ್ಲಿ ಈಗಾಗಲೇ ೧೨೦ಕ್ಕೂ ಹೆಚ್ಚು ಸ್ಟಾರ್ಟ್‌ಅಪ್‌ಗಳು ಸ್ಥಾಪನೆಯಾಗಿದ್ದು, ೨೦೩೦ರ ವೇಳೆಗೆ ೫೦೦ಕ್ಕೂ ಹೆಚ್ಚು ಸ್ಟಾರ್ಟ್‌ಅಪ್‌ಗಳ ಸ್ಥಾಪನೆಯ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.

ರಿಂಗ್‌ರೋಡ್ ಮತ್ತು ಹೊಸ ಕೆರೆ
ವೇಗವಾಗಿ ಬೆಳೆಯುತ್ತಿರುವ ಕಲಬುರಗಿ ನಗರದ ಸಂಚಾರ ವ್ಯವಸ್ಥೆ ಸುಧಾರಿಸಲು ಸೇಡಂ ರಸ್ತೆಯ ರಿಂಗ್‌ರೋಡ್‌ನಲ್ಲಿ ಮೇಲ್ಸೇತುವೆ ನಿರ್ಮಿಸುವುದಾಗಿ ಮುಖ್ಯಮಂತ್ರಿ ಹೇಳಿದರು.
ಹೊಸ ಪೆರಿಫೆರಲ್ ರಿಂಗ್‌ರೋಡ್‌ಗಾಗಿ ಡಿಪಿಆರ್ ಸಿದ್ಧಪಡಿಸಲಾಗುತ್ತಿದೆ. ೩೦ ಕೋಟಿ ವೆಚ್ಚದಲ್ಲಿ ನಗರದ ಪ್ರಮುಖ ಹಸಿರು ಪ್ರದೇಶ ಮತ್ತು ಸಾರ್ವಜನಿಕ ವಿಹಾರ ತಾಣವಾಗಿ ಹೊಸ ಕೆರೆ ಹಾಗೂ ಮನರಂಜನಾ ಉದ್ಯಾನ ಅಭಿವೃದ್ಧಿಪಡಿಸಲಾಗುವುದು ಎಂದು ಘೋಷಿಸಿದರು.
ನಿವೇಶನರಹಿತ ಕುಟುಂಬಗಳಿಗೆ ೫೦ ಸಾವಿರ ನಿವೇಶನ
ಕಲಬುರಗಿ ಜಿಲ್ಲೆಯಲ್ಲಿ ನಿವೇಶನರಹಿತ ಕುಟುಂಬಗಳಿಗೆ ೫೦,೦೦೦ ವಸತಿ ನಿವೇಶನಗಳನ್ನು ಅಭಿವೃದ್ಧಿಪಡಿಸುವುದಾಗಿ ಮುಖ್ಯಮಂತ್ರಿ ಘೋಷಿಸಿದರು.
ಎಐ ಆಧಾರಿತ ಸಿಸಿಟಿವಿ ವ್ಯವಸ್ಥೆ
ಸಾರ್ವಜನಿಕ ಸುರಕ್ಷತೆ, ಅಪರಾಧ ತಡೆ ಹಾಗೂ ಸಂಚಾರ ನಿರ್ವಹಣೆಯನ್ನು ಬಲಪಡಿಸಲು ಕಲಬುರಗಿ ನಗರ ಮತ್ತು ತಾಲೂಕು ಕೇಂದ್ರಗಳಲ್ಲಿ ಎಐ ಆಧಾರಿತ ಸಿಸಿಟಿವಿ ಜಾಲ ಅಳವಡಿಸಲಾಗುವುದು ಎಂದು ತಿಳಿಸಿದರು.
ತ್ಯಾಜ್ಯ ನಿರ್ವಹಣೆ ಸೇರಿದಂತೆ ನಗರ ಸ್ಥಳೀಯ ಸಂಸ್ಥೆಗಳ ನಾಗರಿಕ ಸೇವೆಗಳ ಮೇಲ್ವಿಚಾರಣೆಯಲ್ಲಿಯೂ ಈ ವ್ಯವಸ್ಥೆಯನ್ನು ಬಳಸಲಾಗುವುದು ಎಂದು ಹೇಳಿದರು.
ಪ್ರವಾಸೋದ್ಯಮ ಮತ್ತು ಪಾರಂಪರಿಕ ತಾಣಗಳ ಅಭಿವೃದ್ಧಿ
ಕಲಬುರಗಿ ಕೋಟೆ, ಶರಣಬಸವೇಶ್ವರ ದೇವಸ್ಥಾನ, ಖ್ವಾಜಾ ಬಂದೇ ನವಾಜ್ ದರ್ಗಾ, ಬುದ್ಧ ವಿಹಾರ, ಮಳಖೇಡ, ಸನ್ನತಿ ಹಾಗೂ ಗಾಣಗಾಪುರವನ್ನು ಸಂಪರ್ಕಿಸುವ ಪುಣ್ಯಯಾತ್ರಾ ಸರ್ಕ್ಯೂಟ್ ಅಭಿವೃದ್ಧಿಪಡಿಸಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು.
ಗಾಣಗಾಪುರವನ್ನು ಮೊದಲ ಹಂತದಲ್ಲಿ ೫೦ ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು. ಮಳಖೇಡ, ನಾಗಾವಿ, ಕಾಳಗಿ ಮತ್ತು ಸನ್ನತಿ ಸೇರಿದಂತೆ ಪಾರಂಪರಿಕ ತಾಣಗಳ ಪುನರಾಭಿವೃದ್ಧಿಗೂ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.
ಬಸವಣ್ಣನವರ ತತ್ವಗಳು ಮತ್ತು ವಚನ ಪರಂಪರೆಯನ್ನು ಯುವ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಕಲಬುರಗಿಯಲ್ಲಿ ವಚನ ಮಂಟಪ ಸ್ಥಾಪಿಸಲಾಗುವುದು ಎಂದು ಘೋಷಿಸಿದರು.
ಕಲ್ಯಾಣ ಕರ್ನಾಟಕದಲ್ಲಿ ಸ್ಪೋರ್ಟ್ಸ್ ಸಿಟಿ
ಮುಂದಿನ ಎರಡು ವರ್ಷಗಳಲ್ಲಿ ಕಲಬುರಗಿಯ ಚಂದ್ರಶೇಖರ ಪಾಟೀಲ ಕ್ರೀಡಾಂಗಣವನ್ನು ಆಧುನಿಕ ಕ್ರೀಡಾ ಮೂಲಸೌಕರ್ಯದೊಂದಿಗೆ ಸಮಗ್ರವಾಗಿ ಪುನರಾಭಿವೃದ್ಧಿಪಡಿಸಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು.
ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಕ್ರಿಕೆಟ್ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಲು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಜೊತೆ ಸರ್ಕಾರ ಒಡಂಬಡಿಕೆ ಮಾಡಿಕೊಳ್ಳಲಿದೆ ಎಂದು ತಿಳಿಸಿದರು.
ಕಲಬುರಗಿ ತಾಲೂಕಿನ ಹಡಗಿಲ ಹಾರುತಿ ಗ್ರಾಮದಲ್ಲಿ “ಸ್ಪೋರ್ಟ್ಸ್ ಸಿಟಿ” ಸ್ಥಾಪಿಸಲಾಗುವುದು. ವಿವಿಧ ಕ್ರೀಡೆಗಳಿಗೆ ಅಂತರರಾಷ್ಟ್ರೀಯ ಮಟ್ಟದ ಒಳಾಂಗಣ ಮತ್ತು ಹೊರಾಂಗಣ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಹೇಳಿದರು.
ಕೋಟಿ ವೃಕ್ಷ ಅಭಿಯಾನ
ಕಲ್ಯಾಣ ಕರ್ನಾಟಕದಲ್ಲಿ ಹಸಿರು ಹೊದಿಕೆ ಹೆಚ್ಚಿಸಲು ಮುಂದಿನ ಎರಡು ವರ್ಷಗಳ ಕಾಲ ಕೋಟಿ ವೃಕ್ಷ ಅಭಿಯಾನ ಕೈಗೊಳ್ಳಲಾಗುವುದು ಎಂದು ಡಿ.ಕೆ. ಶಿವಕುಮಾರ್ ಘೋಷಿಸಿದರು.
ಒಂದು ಕೋಟಿ ಗಿಡಗಳನ್ನು ನೆಟ್ಟು ಅವುಗಳನ್ನು ಪೋಷಿಸುವುದು ಅಭಿಯಾನದ ಗುರಿಯಾಗಿದೆ ಎಂದು ತಿಳಿಸಿದರು.
೩೭೧(ಜೆ) ಮೂಲಕ ಉದ್ಯೋಗ ಮತ್ತು ಶಿಕ್ಷಣಕ್ಕೆ ಒತ್ತು
ಕಲ್ಯಾಣ ಕರ್ನಾಟಕದ ಅಭಿವೃದ್ಧಿಯಲ್ಲಿ ಸಂವಿಧಾನದ ೩೭೧(ಜೆ) ವಿಶೇಷ ಸ್ಥಾನಮಾನದ ಪಾತ್ರವನ್ನು ಮುಖ್ಯಮಂತ್ರಿ ತಮ್ಮ ಭಾಷಣದಲ್ಲಿ ಉಲ್ಲೇಖಿಸಿದರು.
೩೭೧(ಜೆ) ಅಡಿಯಲ್ಲಿ ಇದುವರೆಗೆ ೭೯,೩೮೩ ಯುವಕರಿಗೆ ಉದ್ಯೋಗ ಕಲ್ಪಿಸಲಾಗಿದೆ ಎಂದು ಅವರು ಹೇಳಿದರು. ಪ್ರಸ್ತುತ ೭೨ ಸಾವಿರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದ್ದು, ಇದರಲ್ಲಿ ೩೨ ಸಾವಿರ ಹುದ್ದೆಗಳು ಈ ಭಾಗದ ಜನರಿಗೆ ದೊರೆಯಲಿವೆ ಎಂದು ತಿಳಿಸಿದರು.
ವೈದ್ಯಕೀಯ ಕ್ಷೇತ್ರದಲ್ಲಿ ೧೦,೦೦೦ಕ್ಕೂ ಹೆಚ್ಚು ಹಾಗೂ ಎಂಜಿನಿಯರಿಂಗ್ ಕ್ಷೇತ್ರದಲ್ಲಿ ೩೧,೦೦೦ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರವೇಶದ ಅವಕಾಶ ೩೭೧(ಜೆ) ಮೂಲಕ ದೊರೆತಿದೆ ಎಂದು ಹೇಳಿದರು.
೨೫ ಸಾವಿರ ಕೋಟಿ ವಿಶೇಷ ಅನುದಾನ
ಕಳೆದ ೧೨ ವರ್ಷಗಳಲ್ಲಿ ಕಲ್ಯಾಣ ಕರ್ನಾಟಕಕ್ಕೆ ಸುಮಾರು ೨೫ ಸಾವಿರ ಕೋಟಿ ವಿಶೇಷ ಅನುದಾನ ನೀಡಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.
ಈ ಮೊತ್ತದಲ್ಲಿ ಈಗಾಗಲೇ ೧೪,೦೦೦ ಕೋಟಿ ಖರ್ಚು ಮಾಡಲಾಗಿದ್ದು, ಒಟ್ಟು ೪೧,೧೦೩ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಈ ಪೈಕಿ ೩೨,೯೮೫ ಕಾಮಗಾರಿಗಳು ಪೂರ್ಣಗೊಂಡಿದ್ದು, ೮,೧೧೮ ಕಾಮಗಾರಿಗಳು ವಿವಿಧ ಹಂತಗಳಲ್ಲಿ ಪ್ರಗತಿಯಲ್ಲಿವೆ ಎಂದು ಅವರು ಮಾಹಿತಿ ನೀಡಿದರು.
ಆರೋಗ್ಯ ಕ್ಷೇತ್ರಕ್ಕೆ ೧,೭೯೭ ಕೋಟಿ
ಕಲ್ಯಾಣ ಕರ್ನಾಟಕವನ್ನು ಆರೋಗ್ಯ ಸೇವೆಗಳ ಹಬ್ ಆಗಿ ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.
ಯಾದಗಿರಿ, ಕೊಪ್ಪಳ ಮತ್ತು ಬೀದರ್‌ನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಸ್ಥಾಪಿಸಲಾಗುತ್ತಿದೆ. ಇಂದಿರಾಗಾಂಧಿ ತಾಯಿ-ಮಕ್ಕಳ ಆಸ್ಪತ್ರೆ, ಕಿದ್ವಾಯಿ ಮತ್ತು ಜಯದೇವ ಆಸ್ಪತ್ರೆಗಳ ಸೇವೆಗಳನ್ನು ಇನ್ನಷ್ಟು ವಿಸ್ತರಿಸಲಾಗುತ್ತಿದೆ ಎಂದು ತಿಳಿಸಿದರು.
ಈ ಆಸ್ಪತ್ರೆಗಳಿಗೆ ೪೨೩ ಕೋಟಿ ವೆಚ್ಚ ಮಾಡಲಾಗುತ್ತಿದೆ ಎಂದು ಹೇಳಿದರು. ಆರೋಗ್ಯ ಕ್ಷೇತ್ರಕ್ಕೆ ಒಟ್ಟಾರೆ ೧,೭೯೭ ಕೋಟಿ ಒದಗಿಸಲಾಗಿದೆ ಎಂದು ತಿಳಿಸಿದರು.
ಕಲ್ಯಾಣಪಥ ಯೋಜನೆಗೆ ೧,೦೦೦ ಕೋಟಿ
ಕಲ್ಯಾಣ ಕರ್ನಾಟಕದ ಗ್ರಾಮೀಣ ರಸ್ತೆಗಳನ್ನು ಸುಧಾರಿಸಲು ಕಲ್ಯಾಣಪಥ ಯೋಜನೆ ರೂಪಿಸಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.
೩೮ ವಿಧಾನಸಭಾ ಕ್ಷೇತ್ರಗಳಲ್ಲಿ ೧,೧೫೦ ಕಿ.ಮೀ. ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ೧,೦೦೦ ಕೋಟಿ ನೀಡಲಾಗಿದೆ. ಪ್ರತಿ ಕ್ಷೇತ್ರಕ್ಕೆ ೧೨೦ ಕೋಟಿ ಮೀಸಲಿಡಲಾಗಿದೆ ಎಂದು ಅವರು ಹೇಳಿದರು.
೧೧,೭೭೦ ಕೋಟಿ ಮೊತ್ತದ ಯೋಜನೆಗಳಿಗೆ ನಿರ್ಧಾರ
ಕಲಬುರಗಿಯಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಟ್ಟು ೧೧,೭೭೦ ಕೋಟಿ ಮೊತ್ತದ ಬೃಹತ್ ಯೋಜನೆಗಳಿಗೆ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.
೩೫೦ ಕೆಪಿಎಸ್ ಶಾಲೆಗಳ ನಿರ್ಮಾಣದ ಗುರಿಯನ್ನೂ ಸರ್ಕಾರ ಹೊಂದಿದೆ ಎಂದು ಅವರು ತಿಳಿಸಿದರು.
ಕುಡಿಯುವ ನೀರು, ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ
ಕಲ್ಯಾಣ ಕರ್ನಾಟಕದ ಕುಡಿಯುವ ನೀರಿನ ಯೋಜನೆಗಳಿಗೆ ೭,೨೦೦ ಕೋಟಿ ವಿನಿಯೋಗಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಹೇಳಿದರು.
ಈ ಭಾಗದ ೨೫.೭೪ ಲಕ್ಷ ಕುಟುಂಬಗಳ ಯಜಮಾನಿಯರಿಗೆ ಗೃಹಲಕ್ಷ್ಮಿ ಯೋಜನೆಯಡಿ ಹಣ ನೀಡಲಾಗಿದೆ. ೨೩ ಲಕ್ಷ ಮನೆಗಳಿಗೆ ಗೃಹಜ್ಯೋತಿ ಯೋಜನೆಯ ಮೂಲಕ ವಿದ್ಯುತ್ ಸೌಲಭ್ಯ ಕಲ್ಪಿಸಲಾಗಿದೆ ಎಂದು ಅವರು ಹೇಳಿದರು.
ನಿರುದ್ಯೋಗಿ ಯುವಕ-ಯುವತಿಯರಿಗೆ ಒಟ್ಟು ೩೮೨ ಕೋಟಿ ನೀಡಲಾಗಿದೆ. ಮಹಿಳೆಯರು ಉಚಿತವಾಗಿ ಪ್ರಯಾಣಿಸಿರುವ ೯೩.೦೬ ಕೋಟಿ ಟ್ರಿಪ್‌ಗಳಿಗೆ ೩,೪೫೨.೯೦ ಕೋಟಿ ವೆಚ್ಚ ಮಾಡಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.
ತುಂಗಭದ್ರಾ ಸಮತೋಲನ ಜಲಾಶಯ
ಕೊಪ್ಪಳ ಜಿಲ್ಲೆಯ ನವಲಿಯಲ್ಲಿ ತುಂಗಭದ್ರಾ ಆಣೆಕಟ್ಟಿಗೆ ಸಮತೋಲನ ಜಲಾಶಯ ನಿರ್ಮಿಸಲು ನಿರ್ಧರಿಸಲಾಗಿದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.
ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ಅವರ ನೇತೃತ್ವದಲ್ಲಿ ಕರ್ನಾಟಕ, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳ ಮುಖ್ಯಮಂತ್ರಿಗಳನ್ನು ಒಂದೇ ವೇದಿಕೆಗೆ ಕರೆತಂದು ಈ ಕುರಿತು ನಿರ್ಣಯ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು.
ಕಲ್ಯಾಣ ಕರ್ನಾಟಕದ ಇತಿಹಾಸ ಮತ್ತು ೩೭೧(ಜೆ) ಕುರಿತು ಉಲ್ಲೇಖ
ಕಲ್ಯಾಣ ಕರ್ನಾಟಕದ ವಿಮೋಚನಾ ಚಳವಳಿ ಹಾಗೂ ಈ ಭಾಗದ ಅಭಿವೃದ್ಧಿಯಲ್ಲಿ ಕಾಂಗ್ರೆಸ್ ನಾಯಕರ ಕೊಡುಗೆಯನ್ನು ಮುಖ್ಯಮಂತ್ರಿ ತಮ್ಮ ಭಾಷಣದಲ್ಲಿ ಉಲ್ಲೇಖಿಸಿದರು.
ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಧರಂಸಿಂಗ್ ಹಾಗೂ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರ ಪ್ರಯತ್ನಗಳನ್ನು ಅವರು ಪ್ರಸ್ತಾಪಿಸಿದರು.
ಧರಂಸಿಂಗ್ ಅವರ ವರದಿಯ ಆಧಾರದ ಮೇಲೆ ೧೯೯೦ರಲ್ಲಿ ಹೈದರಾಬಾದ್-ಕರ್ನಾಟಕ ಅಭಿವೃದ್ಧಿ ಮಂಡಳಿ ಸ್ಥಾಪನೆಯಾಯಿತು ಎಂದು ಹೇಳಿದರು.
೩೭೧(ಜೆ) ತಿದ್ದುಪಡಿಯಲ್ಲಿನ ಕೊಡುಗೆಗಳ ಕುರಿತು ಮಾತನಾಡಿದ ಅವರು, ಸೋನಿಯಾ ಗಾಂಧಿ, ಮನಮೋಹನ್ ಸಿಂಗ್ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರ ಪಾತ್ರವನ್ನು ಉಲ್ಲೇಖಿಸಿದರು.
ರೈಲ್ವೆ ಮತ್ತು ಕೈಗಾರಿಕಾ ಅಭಿವೃದ್ಧಿ
ಕಲ್ಯಾಣ ಕರ್ನಾಟಕಕ್ಕೆ ೨೭ ಹೊಸ ರೈಲುಗಳನ್ನು ಮಂಜೂರು ಮಾಡಿಸುವಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ಪಾತ್ರವನ್ನು ಮುಖ್ಯಮಂತ್ರಿ ಪ್ರಸ್ತಾಪಿಸಿದರು.
ಗುಲಬರ್ಗಾ-ವಾಡಿ ಮತ್ತು ಬೀದರ್-ಗುಲಬರ್ಗಾ ಹೊಸ ರೈಲ್ವೆ ಮಾರ್ಗಗಳ ನಿರ್ಮಾಣವನ್ನೂ ಅವರು ಉಲ್ಲೇಖಿಸಿದರು.
ಸಣ್ಣ ಕೈಗಾರಿಕೆಗಳ ಅಭಿವೃದ್ಧಿಗೆ ೨೦೦ ಕೋಟಿ ನೀಡಲಾಗಿದೆ ಎಂದು ತಿಳಿಸಿದರು.
ಯುವಕರಿಗೆ ನಾಯಕತ್ವ ತರಬೇತಿ
ಯುವಕರಲ್ಲಿ ನಾಯಕತ್ವ ಗುಣಗಳನ್ನು ಬೆಳೆಸುವ ಉದ್ದೇಶದಿಂದ ೧೦ ಸಾವಿರ ಭಾರತ್ ಜೋಡೋ ಯುವ ಸಂಘಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಹೇಳಿದರು.
ಕ್ರೀಡೆ, ಕಲೆ ಮತ್ತು ಸಂಗೀತ ಕ್ಷೇತ್ರಗಳಲ್ಲಿ ಯುವಕರ ಪ್ರತಿಭೆಗಳನ್ನು ಬೆಳೆಸಲು ಅವಕಾಶ ಕಲ್ಪಿಸಲಾಗುತ್ತಿದೆ ಎಂದು ತಿಳಿಸಿದರು.
ಅಭಿವೃದ್ಧಿಯ ವ್ಯಾಖ್ಯಾನ
“ಇಡುವ ಹೆಜ್ಜೆ ಚಿಕ್ಕದಿರಬಹುದು, ಆದರೆ ಆಲೋಚನೆ ದೊಡ್ಡದಿರಬೇಕು” ಎಂದು ಹೇಳಿದ ಮುಖ್ಯಮಂತ್ರಿ, ಅಭಿವೃದ್ಧಿ ಎಂದರೆ ಕೇವಲ ಕಟ್ಟಡಗಳ ನಿರ್ಮಾಣವಲ್ಲ; ಕಟ್ಟಕಡೆಯ ವ್ಯಕ್ತಿಯ ನೆಮ್ಮದಿಯ ಬದುಕು ಕೂಡ ಅಭಿವೃದ್ಧಿಯ ಭಾಗವಾಗಿದೆ ಎಂದು ಹೇಳಿದರು.
ಸಂತ ಸೇವಾಲಾಲ್ ಅವರ ಮಾತುಗಳನ್ನು ಉಲ್ಲೇಖಿಸಿದ ಅವರು, ಶ್ರಮ ಮತ್ತು ಬೆವರಿನ ಮೂಲಕ ಇತಿಹಾಸ ನಿರ್ಮಿಸುವ ಅಗತ್ಯವನ್ನು ಪ್ರತಿಪಾದಿಸಿದರು.
“ಪ್ರಜಾಸೇವೆಯೇ ದೇವರ ಸೇವೆ” ಎಂಬ ಆಶಯದೊಂದಿಗೆ ಸರ್ಕಾರ ಜನರ ಸಮಸ್ಯೆಗಳನ್ನು ಪರಿಹರಿಸಲು ಆಡಳಿತವನ್ನು ಮನೆಬಾಗಿಲಿಗೆ ತರುವ ಪ್ರಯತ್ನ ಮಾಡುತ್ತಿದೆ ಎಂದು ಹೇಳಿದರು.
೨೦೨೮ ಮತ್ತು ೨೦೨೯ರ ಚುನಾವಣೆಗಳ ಉಲ್ಲೇಖ
ಭಾಷಣದ ಕೊನೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಹಾಗೂ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುವಂತೆ ಸಾರ್ವಜನಿಕರಿಗೆ ಮನವಿ ಮಾಡಿದರು.
“ನವ ಕರ್ನಾಟಕ, ಸದೃಢ ಕರ್ನಾಟಕ” ನಿರ್ಮಾಣ ಸರ್ಕಾರದ ಸಂಕಲ್ಪವಾಗಿದೆ ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ, ಸಂಸದ ರಾಧಾಕೃಷ್ಣ ದೊಡ್ಡಮನಿ, ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್. ಪಾಟೀಲ್, ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮದ ಅಧ್ಯಕ್ಷೆ ಕನೀಜ್ ಫಾತೀಮಾ, ಶಾಸಕರಾದ ಎಂ.ವೈ. ಪಾಟೀಲ್, ಅಲ್ಲಮಪ್ರಭು ಪಾಟೀಲ್, ಬಸವರಾಜ ಮತ್ತಿಮಡು, ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ, ಜಗದೇವ್ ಗುತ್ತೇದಾರ್, ಶಶೀಲ್ ನಮೋಶಿ, ಡಾ. ಚಂದ್ರಶೇಖರ ಪಾಟೀಲ್, ಬಿ.ಜಿ. ಪಾಟೀಲ್, ಮೇಯರ್ ಅಜ್ವಲ್ ಅಹ್ಮದ್ ಗೋಳಾ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಕರ್ನಾಟಕ ರಾಜ್ಯ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಅರುಣಕುಮಾರ್ ಎಂ.ವೈ. ಪಾಟೀಲ್, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜಹರ್ ಆಲಂ ಖಾನ್, ಕರ್ನಾಟಕ ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸೈಯ್ಯದ್ ಮಹಮೂದ್ ಚಿಸ್ತಿ ಸಾಹೇಬ್, ಜೆಸ್ಕಾಂ ಅಧ್ಯಕ್ಷ ಪ್ರವೀಣ್ ಪಾಟೀಲ್ ಹರವಾಳ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷೆ ಚಂದ್ರಿಕಾ ಪರಮೇಶ್ವರ್ ಹಾಗೂ ಜಿಲ್ಲಾಧಿಕಾರಿ ಇಕ್ರಮ್ ಷರೀಫ್ ಸೇರಿದಂತೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಭಾಗವಹಿಸಿದ್ದರು.