ಮಂಡ್ಯ: ಕನ್ನಡ ಕೇವಲ ಮನೆಯ ಭಾಷೆಯಾಗಿ ಉಳಿಯದೆ, ಜ್ಞಾನದ, ತಂತ್ರಜ್ಞಾನದ, ಉದ್ಯೋಗ, ಶಿಕ್ಷಣ, ಸಂಶೋಧನೆ ಮತ್ತು ಆಡಳಿತದ ಭಾಷೆಯಾಗಿ ಬೆಳೆಯಬೇಕು. ಮಕ್ಕಳು ಕನ್ನಡದಲ್ಲಿ ಕನಸು ಕಾಣುವ, ಚಿಂತಿಸುವ ಹಾಗೂ ಜಗತ್ತಿನ ಜ್ಞಾನವನ್ನು ಕನ್ನಡದ ಮೂಲಕವೂ ಅರಿಯುವ ವಾತಾವರಣ ನಿರ್ಮಾಣವಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚೆಲುವರಾಯಸ್ವಾಮಿ ಹೇಳಿದರು.
ನಗರದ ಸರ್. ಎಂ. ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಭಾನುವಾರ ಆಯೋಜಿಸಿದ್ದ 71ನೇ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಕನ್ನಡ ನಮ್ಮ ಅಸ್ಮಿತೆ, ಸಂಸ್ಕೃತಿ ಮತ್ತು ಇತಿಹಾಸದ ಮೂಲವಾಗಿದೆ. ಕನ್ನಡ ಸಾಹಿತ್ಯಕ್ಕೆ ದೊರೆತಿರುವ ಎಂಟು ಜ್ಞಾನಪೀಠ ಪ್ರಶಸ್ತಿಗಳು ಭಾಷೆಯ ಶ್ರೀಮಂತಿಕೆಗೆ ಸಾಕ್ಷಿಯಾಗಿವೆ. ಬಸವಣ್ಣನವರ ವಚನಗಳು, ದಾಸರ ಕೀರ್ತನೆಗಳು ಹಾಗೂ ಕವಿಗಳ ಕಾವ್ಯಗಳು ನಾಡಿನ ಪರಂಪರೆಯನ್ನು ಎತ್ತಿಹಿಡಿದಿವೆ ಎಂದರು.
1956ರ ನವೆಂಬರ್ 1ರಂದು ಕನ್ನಡ ಮಾತನಾಡುವ ಪ್ರದೇಶಗಳನ್ನು ಒಗ್ಗೂಡಿಸಿ ವಿಶಾಲ ಮೈಸೂರು ರಾಜ್ಯ ಅಸ್ತಿತ್ವಕ್ಕೆ ಬಂದಿತು. 1973ರ ನವೆಂಬರ್ 1ರಂದು ಅಂದಿನ ಮುಖ್ಯಮಂತ್ರಿ ದಿವಂಗತ ಡಿ. ದೇವರಾಜ ಅರಸು ಅವರು ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣ ಮಾಡಿದರು. ಕರ್ನಾಟಕ ಏಕೀಕರಣದ ಕನಸು ನನಸಾಗಿಸುವಲ್ಲಿ ಹುಯಿಲಗೋಳ ನಾರಾಯಣರಾವ್, ಎನ್.ಎಸ್. ಹರ್ಡೀಕರ್, ಗಂಗಾಧರರಾವ್ ದೇಶಪಾಂಡೆ, ಆರ್. ದಿವಾಕರ್, ಕುವೆಂಪು, ಮಾಸ್ತಿ ವೆಂಕಟೇಶ ಅಯ್ಯಂಗಾರ್, ಕೆ. ಶಿವರಾಮ ಕಾರಂತ ಹಾಗೂ ಬಿ.ಎಂ. ಶ್ರೀಕಂಠಯ್ಯ ಸೇರಿದಂತೆ ಅನೇಕ ಮಹನೀಯರ ಕೊಡುಗೆ ಅಪಾರವಾಗಿದೆ ಎಂದು ಹೇಳಿದರು.

ಮಂಡ್ಯ ಜಿಲ್ಲೆ ಬಿ.ಎಂ. ಶ್ರೀಕಂಠಯ್ಯ, ಪು.ತಿ.ನ., ಕೆ.ಎಸ್. ನರಸಿಂಹಸ್ವಾಮಿ, ಜಿ. ವೆಂಕಟಸುಬ್ಬಯ್ಯ, ಕೆ.ಎಸ್. ನಿಸಾರ್ ಅಹಮದ್, ಬೆಸಗರಹಳ್ಳಿ ರಾಮಣ್ಣ ಹಾಗೂ ಎಚ್.ಎಲ್. ನಾಗೇಗೌಡ ಸೇರಿದಂತೆ ಅನೇಕ ಸಾಹಿತಿಗಳು ಮತ್ತು ಸಾಂಸ್ಕೃತಿಕ ಗಣ್ಯರನ್ನು ನಾಡಿಗೆ ನೀಡಿದೆ. ಅವರ ಕನ್ನಡಪರ ಸೇವೆ ಸದಾ ಸ್ಮರಣೀಯವಾಗಿದೆ ಎಂದರು.
ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನ
ರಾಜ್ಯ ಸರ್ಕಾರ ಸಮಾನತೆ ಮತ್ತು ಸಾಮಾಜಿಕ ನ್ಯಾಯದ ಆಶಯದೊಂದಿಗೆ ಜನಸಾಮಾನ್ಯರು ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ. ಮಂಡ್ಯ ಜಿಲ್ಲೆಯಲ್ಲಿ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಈವರೆಗೆ 25.55 ಕೋಟಿ ಉಚಿತ ಪ್ರಯಾಣದ ಟಿಕೆಟ್‌ಗಳನ್ನು ವಿತರಿಸಲಾಗಿದ್ದು, ಇದಕ್ಕಾಗಿ ₹691 ಕೋಟಿ ವೆಚ್ಚ ಭರಿಸಲಾಗಿದೆ. ಅನ್ನಭಾಗ್ಯ ಯೋಜನೆಯಡಿ 4,59,694 ಪಡಿತರ ಚೀಟಿದಾರರಿಗೆ ಉಚಿತ ಆಹಾರ ಧಾನ್ಯ ವಿತರಿಸಲಾಗಿದೆ ಎಂದು ತಿಳಿಸಿದರು.
ಗೃಹಜ್ಯೋತಿ ಯೋಜನೆಯಡಿ 5,05,893 ಗ್ರಾಹಕರು ನೋಂದಾಯಿಸಿಕೊಂಡಿದ್ದು, ಸೆಪ್ಟೆಂಬರ್ 2026ರ ಅಂತ್ಯದವರೆಗೆ ಉಚಿತ ವಿದ್ಯುತ್ ಸೌಲಭ್ಯಕ್ಕಾಗಿ ₹700 ಕೋಟಿ ಪಾವತಿಸಲಾಗಿದೆ. ಗೃಹಲಕ್ಷ್ಮಿ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ₹1,762 ಕೋಟಿ ಪಾವತಿಸಲಾಗಿದೆ. ಯುವನಿಧಿ ಯೋಜನೆಯಡಿ 9,645 ಅಭ್ಯರ್ಥಿಗಳಿಗೆ ₹3.32 ಕೋಟಿ ನಿರುದ್ಯೋಗ ಭತ್ಯೆ ನೀಡಲಾಗಿದೆ ಎಂದರು.
ರೂ 1,793 ಕೋಟಿ ವೆಚ್ಚದ 57 ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ
ಜಿಲ್ಲೆಯ ಮೂಲಸೌಕರ್ಯ ಅಭಿವೃದ್ಧಿ, ಸಾರ್ವಜನಿಕ ಸೇವೆಗಳ ಸುಧಾರಣೆ ಮತ್ತು ಜನರ ಜೀವನಮಟ್ಟ ಹೆಚ್ಚಿಸುವುದು ಸರ್ಕಾರದ ಆದ್ಯತೆಯಾಗಿದೆ. ಈ ನಿಟ್ಟಿನಲ್ಲಿ ಅಕ್ಟೋಬರ್ 31ರಂದು ಮುಖ್ಯಮಂತ್ರಿಗಳ ಉಪಸ್ಥಿತಿಯಲ್ಲಿ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ಹಾಗೂ ಫಲಾನುಭವಿಗಳಿಗೆ ಸೌಲಭ್ಯ ವಿತರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಒಟ್ಟು ₹1,793 ಕೋಟಿ ವೆಚ್ಚದ 57 ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ ಎಂದು ಹೇಳಿದರು.

ಕೆ.ಆರ್. ಪೇಟೆ, ನಾಗಮಂಗಲ ಮತ್ತು ಪಾಂಡವಪುರ ವ್ಯಾಪ್ತಿಯ ಕೆರೆಗಳನ್ನು ತುಂಬಿಸುವುದು, ರಸ್ತೆ, ವಿತರಣಾ ನಾಲೆ ಹಾಗೂ ಕಾಲುವೆಗಳ ದುರಸ್ತಿ ಸೇರಿದಂತೆ ಕಾವೇರಿ ನೀರಾವರಿ ನಿಗಮ ಮತ್ತು ಹೇಮಾವತಿ ಎಡದಂಡೆ ನಾಲಾ ವಿಭಾಗದ ಕಾಮಗಾರಿಗಳಿಗೆ ₹806 ಕೋಟಿ ವೆಚ್ಚದಲ್ಲಿ ಯೋಜನೆ ರೂಪಿಸಲಾಗಿದೆ. ಮಂಡ್ಯ ಮತ್ತು ಶ್ರೀರಂಗಪಟ್ಟಣ ವ್ಯಾಪ್ತಿಯ ಕಾವೇರಿ, ಕೆರಗೋಡು, ಶಿಂಷಾ, ಲೋಕಸರ ಹಾಗೂ ಮದ್ದೂರು ಶಾಖಾ ನಾಲೆಗಳ ಅಭಿವೃದ್ಧಿಗೆ ₹224 ಕೋಟಿ ವೆಚ್ಚದಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಮೈಷುಗರ್ ಕಾರ್ಖಾನೆಯ ಬಾಯ್ಲಿಂಗ್ ಹೌಸ್ ಆಧುನೀಕರಣಕ್ಕೆ ₹60 ಕೋಟಿ ವೆಚ್ಚ ಮಾಡಲಾಗುತ್ತಿದೆ ಎಂದರು.
ಪಾಂಡವಪುರ ಪಟ್ಟಣದ ಒಳಚರಂಡಿ ಯೋಜನೆಯಡಿ ಬಿಟ್ಟುಹೋಗಿರುವ ಕೊಳವೆ ಮಾರ್ಗ ಮತ್ತು ಗೃಹ ಸಂಪರ್ಕ ಕಲ್ಪಿಸಲು ₹11.62 ಕೋಟಿ ವೆಚ್ಚದಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಕಟ್ಟಡ ನಿರ್ಮಾಣ, ಮಂಡ್ಯ ನಗರದಲ್ಲಿ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಸ್ಥಾಪನೆ, ಜಿಲ್ಲಾ ಮುಖ್ಯರಸ್ತೆಗಳ ಅಭಿವೃದ್ಧಿ ಹಾಗೂ ನಾಗಮಂಗಲ ತಾಲ್ಲೂಕಿನ ಗಂಗವಾಡಿ ಚೀಣ್ಯ ಬಳಿ ಸೇತುವೆ ಪುನರ್ ನಿರ್ಮಾಣ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ₹114.60 ಕೋಟಿ ವೆಚ್ಚ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಆವರಣದಲ್ಲಿ ಜಿಲ್ಲಾ ಔಷಧ ಉಗ್ರಾಣ, ಮಂಡ್ಯ ತಾಲ್ಲೂಕಿನ ಬಿ. ಹೊಸೂರು ಕಾಲೋನಿಯಲ್ಲಿ 100 ಹಾಸಿಗೆಗಳ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಹಾಗೂ ಶ್ರೀರಂಗಪಟ್ಟಣ ತಾಲ್ಲೂಕಿನ ಮಹದೇವಪುರ ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ನಿರ್ಮಾಣ ಸೇರಿದಂತೆ ₹34.23 ಕೋಟಿ ವೆಚ್ಚದ ಕಾಮಗಾರಿಗಳನ್ನು ಪೂರ್ಣಗೊಳಿಸಿ ಉದ್ಘಾಟಿಸಲಾಗಿದೆ. ಮಂಡ್ಯ ತಾಲ್ಲೂಕಿನ ದುದ್ದ ಗ್ರಾಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆ ಹಾಗೂ ಮಳವಳ್ಳಿ ತಾಲ್ಲೂಕಿನ ಹಲಗೂರಿನಲ್ಲಿ ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯವನ್ನು ₹28.50 ಕೋಟಿ ವೆಚ್ಚದಲ್ಲಿ ಪೂರ್ಣಗೊಳಿಸಲಾಗಿದೆ ಎಂದರು.
ಮಂಡ್ಯ ತಾಲ್ಲೂಕಿನ ಹಂಪಾಪುರದಲ್ಲಿ 400 ಕೆ.ವಿ. ವಿದ್ಯುತ್ ಉಪಕೇಂದ್ರ ಸ್ಥಾಪನೆಗೆ ₹402.92 ಕೋಟಿ ಹಾಗೂ ನಾಗಮಂಗಲ ತಾಲ್ಲೂಕಿನ ಇರುಬ್ಬನಹಳ್ಳಿ ವ್ಯಾಪ್ತಿಯಲ್ಲಿ 66/11 ಕೆ.ವಿ. ವಿದ್ಯುತ್ ಉಪಕೇಂದ್ರ ಮತ್ತು ವಿದ್ಯುತ್ ಮಾರ್ಗ ನಿರ್ಮಾಣಕ್ಕೆ ₹17.91 ಕೋಟಿ ವೆಚ್ಚದಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಇದರಿಂದ ರೈತರು ಹಾಗೂ ಸಾರ್ವಜನಿಕರಿಗೆ ನಿರಂತರ ಮತ್ತು ಗುಣಮಟ್ಟದ ವಿದ್ಯುತ್ ಪೂರೈಕೆಗೆ ಅನುಕೂಲವಾಗಲಿದೆ ಎಂದು ಹೇಳಿದರು.

ಕ್ರೀಡೆ, ಯುವಜನತೆ ಮತ್ತು ರೈತರ ಅಭಿವೃದ್ಧಿಗೆ ಆದ್ಯತೆ
ಕಲೆ ಮತ್ತು ಸಂಸ್ಕೃತಿಯನ್ನು ಉತ್ತೇಜಿಸುವ ಉದ್ದೇಶದಿಂದ ಈ ವರ್ಷ ಶ್ರೀರಂಗಪಟ್ಟಣ ದಸರಾ ಉತ್ಸವವನ್ನು ನಾಲ್ಕು ದಿನಗಳ ಕಾಲ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕೃಷ್ಣರಾಜಸಾಗರ ಜಲಾಶಯದಲ್ಲಿ ಗಂಗಾ ಆರತಿ ಮಾದರಿಯಲ್ಲಿ ಆಯೋಜಿಸಿದ್ದ ಕಾವೇರಿ ಆರತಿ ಕಾರ್ಯಕ್ರಮವು ಜನರ ಮನಸೂರೆಗೊಂಡಿದೆ ಎಂದರು.
ಯುವಜನರಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ ಮತ್ತು ಸಾಮಾಜಿಕ ಸಾಮರಸ್ಯ ಬೆಳೆಸುವ ಉದ್ದೇಶದಿಂದ ಜಿಲ್ಲೆಯ ಗ್ರಾಮ ಪಂಚಾಯಿತಿಗಳು ಹಾಗೂ ನಗರ ವಾರ್ಡ್‌ಗಳಲ್ಲಿ ಒಟ್ಟು 283 ಭಾರತ್ ಜೋಡೋ ಯುವ ಸಂಘಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಈವರೆಗೆ 40 ಸಾವಿರಕ್ಕೂ ಹೆಚ್ಚು ಯುವಕರು ನೋಂದಣಿ ಮಾಡಿಕೊಂಡಿರುವುದು ಸಂತಸದ ಸಂಗತಿಯಾಗಿದೆ. ಸರ್. ಎಂ. ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಬಾಸ್ಕೆಟ್‌ಬಾಲ್ ಒಳಾಂಗಣ ಕ್ರೀಡಾಂಗಣ ನಿರ್ಮಾಣಕ್ಕೆ ₹3.50 ಕೋಟಿ ಹಾಗೂ ಶ್ರೀರಂಗಪಟ್ಟಣ ತಾಲ್ಲೂಕು ಕ್ರೀಡಾಂಗಣದ ಅಭಿವೃದ್ಧಿಗೆ ₹1 ಕೋಟಿ ಅನುದಾನಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದರು.
ತೋಟಗಾರಿಕೆ ಬೆಳೆಗಳನ್ನು ಬೆಳೆಯುವ ರೈತರನ್ನು ಪ್ರೋತ್ಸಾಹಿಸಲು ಹನಿ ನೀರಾವರಿ, ಕೃಷಿ ಯಾಂತ್ರೀಕರಣ, ಸೋಲಾರ್ ಪಂಪ್‌ಸೆಟ್ ಸೇರಿದಂತೆ ವಿವಿಧ ಯೋಜನೆಗಳಡಿ 3,304 ಫಲಾನುಭವಿಗಳಿಗೆ ₹692 ಲಕ್ಷ ಸಹಾಯಧನ ಒದಗಿಸಲಾಗಿದೆ ಎಂದರು.
ಕಂದಾಯ ಸೇವೆಗಳಲ್ಲಿ ಮಂಡ್ಯ ಜಿಲ್ಲೆ ರಾಜ್ಯಕ್ಕೆ ಪ್ರಥಮ

ಸಾರ್ವಜನಿಕರ ಅಹವಾಲುಗಳನ್ನು ತ್ವರಿತವಾಗಿ ವಿಲೇವಾರಿ ಮಾಡಲು ಜಿಲ್ಲೆಯಲ್ಲಿ 54 ಪ್ರಜಾಸೇವಾ ಆಂದೋಲನಗಳನ್ನು ಆಯೋಜಿಸಲಾಗಿದೆ. ಈವರೆಗೆ 1,974 ಅರ್ಜಿಗಳು ಸ್ವೀಕೃತವಾಗಿದ್ದು, 1,128 ಅರ್ಜಿಗಳನ್ನು ತೃಪ್ತಿಕರವಾಗಿ ಇತ್ಯರ್ಥಪಡಿಸಲಾಗಿದೆ. 577 ಅರ್ಜಿಗಳನ್ನು ನಿಗದಿತ ಅವಧಿಯೊಳಗೆ ವಿಲೇವಾರಿ ಮಾಡಲಾಗಿದೆ ಎಂದು ಹೇಳಿದರು.
ಕಂದಾಯ ಇಲಾಖೆಯಲ್ಲಿ ಕಳೆದ ಮೂರೂವರೆ ವರ್ಷಗಳಲ್ಲಿ 27 ಸಾವಿರ ಕಂದಾಯ ನ್ಯಾಯಾಲಯ ಪ್ರಕರಣಗಳನ್ನು ಇತ್ಯರ್ಥಪಡಿಸುವ ಮೂಲಕ ಮಂಡ್ಯ ಜಿಲ್ಲೆ ರಾಜ್ಯದಲ್ಲಿಯೇ ಪ್ರಥಮ ಸ್ಥಾನ ಪಡೆದಿದೆ. ಜಿಲ್ಲೆಯಲ್ಲಿ 18 ಲಕ್ಷ ಪಹಣಿಗಳಿಗೆ ಆಧಾರ್ ಜೋಡಣೆ ಮಾಡಲಾಗಿದೆ. 161 ಗ್ರಾಮಗಳನ್ನು ಕಂದಾಯ ಗ್ರಾಮಗಳನ್ನಾಗಿ ಅಧಿಸೂಚಿಸಲಾಗಿದೆ. ದರಖಾಸ್ತು ಪೋಡಿ ಆಂದೋಲನದಡಿ 1,837 ರೈತರ ಜಮೀನುಗಳನ್ನು ಪೋಡಿ ಮಾಡಲಾಗಿದೆ. ಭೂ ಸುರಕ್ಷಾ ಯೋಜನೆಯಡಿ 3.80 ಕೋಟಿ ಪುಟಗಳ ದಾಖಲೆಗಳನ್ನು ಗಣಕೀಕರಣಗೊಳಿಸಲಾಗಿದೆ. ಪೌತಿ ಖಾತೆ ಆಂದೋಲನದಡಿ 1.72 ಲಕ್ಷ ಖಾತೆಗಳನ್ನು ಮಾಡಲಾಗಿದ್ದು, ಈ ಸಾಧನೆಯಲ್ಲಿಯೂ ಜಿಲ್ಲೆ ರಾಜ್ಯದಲ್ಲಿಯೇ ಪ್ರಥಮ ಸ್ಥಾನದಲ್ಲಿದೆ ಎಂದರು.
ಮುಖ್ಯಮಂತ್ರಿಗಳ ಗ್ರಾಮ ನಿವಾಸ ಯೋಜನೆಯಡಿ ವಸತಿ ರಹಿತರಿಗೆ ನಿವೇಶನ ಹಂಚಿಕೆ ಮಾಡಲು 450 ಎಕರೆ ಸರ್ಕಾರಿ ಜಮೀನು ಗುರುತಿಸಲಾಗಿದ್ದು, 15 ಸಾವಿರ ಫಲಾನುಭವಿಗಳಿಗೆ ನಿವೇಶನ ಹಂಚಿಕೆ ಮಾಡಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು.
ಮೈಸೂರು ದಸರಾ ಸ್ತಬ್ಧಚಿತ್ರಕ್ಕೆ ಪ್ರಥಮ ಸ್ಥಾನ
ಮೈಸೂರು ದಸರಾ ಮಹೋತ್ಸವ-2026ರ ಜಂಬೂಸವಾರಿ ಮೆರವಣಿಗೆಯಲ್ಲಿ ಮಂಡ್ಯ ಜಿಲ್ಲಾ ಪಂಚಾಯತ್ ವತಿಯಿಂದ ಪ್ರದರ್ಶಿಸಲಾದ 'ಅಸ್ಮಿತೆ-ಸ್ತ್ರೀ ಶಕ್ತಿ ಅನಾವರಣ' ಸ್ತಬ್ಧಚಿತ್ರವು ಮೈಸೂರು ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿರುವುದು ಜಿಲ್ಲೆಯ ಹೆಮ್ಮೆಯ ಸಂಗತಿಯಾಗಿದೆ. ಮಹಿಳೆಯರ ಸರ್ವಾಂಗೀಣ ಅಭಿವೃದ್ಧಿ ಮತ್ತು ಸಬಲೀಕರಣದ ಸಂದೇಶ ಸಾರಿದ ಸ್ತಬ್ಧಚಿತ್ರಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು ₹1 ಲಕ್ಷ ಬಹುಮಾನ ಘೋಷಿಸಿದ್ದಾರೆ. ಮಂಡ್ಯದ ಹೈನುಗಾರಿಕೆ, ಕೃಷಿ, ಆಧುನಿಕ ತಂತ್ರಜ್ಞಾನದ ಬಳಕೆ ಹಾಗೂ ಮನೆಗೆಲಸದೊಂದಿಗೆ ಉದ್ಯೋಗವನ್ನೂ ನಿಭಾಯಿಸುವ ಮಹಿಳೆಯರ ಬದುಕಿನ ಚಿತ್ರಣವನ್ನು ಸ್ತಬ್ಧಚಿತ್ರದಲ್ಲಿ ಪ್ರದರ್ಶಿಸಲಾಗಿದೆ ಎಂದರು.
ಜಿಲ್ಲೆಯಲ್ಲಿ 13,376 ಸ್ವಸಹಾಯ ಸಂಘಗಳಲ್ಲಿ 1,43,434 ಮಹಿಳಾ ಸದಸ್ಯರು ಸೇರ್ಪಡೆಗೊಂಡಿದ್ದಾರೆ. 1,093 ಸ್ವಸಹಾಯ ಗುಂಪುಗಳಿಗೆ ₹16.36 ಕೋಟಿ ಸಮುದಾಯ ಬಂಡವಾಳ ನಿಧಿ ಒದಗಿಸಲಾಗಿದೆ. ಶ್ರೀರಂಗಪಟ್ಟಣ ದಸರಾ ವಸ್ತುಪ್ರದರ್ಶನ ಮತ್ತು ಮಾರಾಟ ಮೇಳದಲ್ಲಿ 41 ಸ್ವಸಹಾಯ ಸಂಘಗಳು ಭಾಗವಹಿಸಿ 'ಅಕ್ಕ' ಬ್ರಾಂಡ್ ಉತ್ಪನ್ನಗಳ ಮಾರಾಟದ ಮೂಲಕ ₹8 ಲಕ್ಷ ವಹಿವಾಟು ನಡೆಸಿವೆ. ಪಾಂಡವಪುರ ಮತ್ತು ಶ್ರೀರಂಗಪಟ್ಟಣ ತಾಲ್ಲೂಕುಗಳಲ್ಲಿ ಆರಂಭಿಸಿರುವ ಅಕ್ಕ ಕೆಫೆಗಳಿಗೆ ಉತ್ತಮ ಸ್ಪಂದನೆ ದೊರೆತಿದ್ದು, ಉಳಿದ ತಾಲ್ಲೂಕುಗಳಲ್ಲಿಯೂ ಆರಂಭಿಸಲು ಉದ್ದೇಶಿಸಲಾಗಿದೆ ಎಂದು ಹೇಳಿದರು.
ಸ್ವಚ್ಛ ಭಾರತ್ ಮಿಷನ್ ಅಡಿಯಲ್ಲಿ ಕೆ.ಆರ್. ಪೇಟೆ, ಪಾಂಡವಪುರ ಮತ್ತು ಮಳವಳ್ಳಿ ತಾಲ್ಲೂಕುಗಳಲ್ಲಿ ₹258.37 ಲಕ್ಷ ವೆಚ್ಚದಲ್ಲಿ ಮಲ ತ್ಯಾಜ್ಯ ನಿರ್ವಹಣಾ ಘಟಕಗಳನ್ನು ನಿರ್ಮಿಸಲಾಗಿದೆ. ಗ್ರಾಮೀಣ ಭಾಗದ ಜನರಿಗೆ ಅನುಕೂಲವಾಗುವಂತೆ ರಾಜ್ಯದಲ್ಲಿಯೇ ಮೊದಲ ಬಾರಿಗೆ ಮಂಡ್ಯ ಜಿಲ್ಲೆಯಲ್ಲಿ 'ಮುಗುಳ್ನಗೆ ಸಿಂಚನ' ಕಾರ್ಯಕ್ರಮ ಹಮ್ಮಿಕೊಂಡಿದ್ದು, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಉಚಿತ ದಂತ ಚಿಕಿತ್ಸೆ ಸೌಲಭ್ಯ ಕಲ್ಪಿಸಲಾಗುತ್ತಿದೆ ಎಂದರು.
ಕನ್ನಡ ರಾಜ್ಯೋತ್ಸವದ ಅಂಗವಾಗಿ ಸಾಹಿತ್ಯ, ಕ್ರೀಡೆ, ಸಾಮಾಜಿಕ ಸೇವೆ, ವೈದ್ಯಕೀಯ, ವಿಜ್ಞಾನ ಮತ್ತು ತಂತ್ರಜ್ಞಾನ, ಶಿಕ್ಷಣ, ರಂಗಭೂಮಿ ಹಾಗೂ ಆಡಳಿತ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ 35 ಮಂದಿಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಪ್ರಶಸ್ತಿ ಪುರಸ್ಕೃತರೆಲ್ಲರಿಗೂ ಅಭಿನಂದನೆ ಸಲ್ಲಿಸುವುದಾಗಿ ಹೇಳಿದರು.
ಕನ್ನಡ ನಾಡು, ನುಡಿಯ ಏಳಿಗೆಗಾಗಿ ಪ್ರತಿಯೊಬ್ಬರೂ ನಿಷ್ಠೆ, ಪ್ರಾಮಾಣಿಕತೆ ಮತ್ತು ಬದ್ಧತೆಯಿಂದ ಕಾರ್ಯನಿರ್ವಹಿಸಬೇಕು. ಜಗತ್ತು ತಂತ್ರಜ್ಞಾನದ ವೇಗದಲ್ಲಿ ಮುನ್ನಡೆಯುತ್ತಿದ್ದು, ಕೃತಕ ಬುದ್ಧಿಮತ್ತೆ, ಡಿಜಿಟಲ್ ತಂತ್ರಜ್ಞಾನ, ವಿಜ್ಞಾನ ಮತ್ತು ಸಂಶೋಧನಾ ಕ್ಷೇತ್ರಗಳಲ್ಲಿ ಹೊಸ ಬದಲಾವಣೆಗಳು ನಡೆಯುತ್ತಿವೆ. ಈ ಬದಲಾವಣೆಯ ನಡುವೆ ಕನ್ನಡವು ಜ್ಞಾನದ ಹಾಗೂ ತಂತ್ರಜ್ಞಾನದ ಭಾಷೆಯಾಗಿ ಬೆಳೆಯಬೇಕು. ಇತರೆ ಭಾಷೆಗಳನ್ನು ಕಲಿಯುವುದಕ್ಕೆ ವಿರೋಧವಿಲ್ಲ; ಆದರೆ ಇತರೆ ಭಾಷೆಗಳನ್ನು ಕಲಿಯುವಾಗ ಮಾತೃಭಾಷೆಯನ್ನು ಮರೆಯಬಾರದು. ಕನ್ನಡದ ಬಳಕೆಯನ್ನು ಹೆಚ್ಚಿಸುವ ಮೂಲಕ ನಾಡು, ಜಲ, ಭಾಷೆ ಮತ್ತು ಸಂಸ್ಕೃತಿಯ ರಕ್ಷಣೆಗೆ ಎಲ್ಲರೂ ಕಟಿಬದ್ಧರಾಗಬೇಕು ಎಂದು ಕರೆ ನೀಡಿದರು.
ವಿವಿಧ ಸರ್ಕಾರಿ ಇಲಾಖೆಗಳ ವತಿಯಿಂದ ಸಿದ್ಧಪಡಿಸಲಾದ ಸ್ತಬ್ಧಚಿತ್ರಗಳು ಹಾಗೂ 30 ಪರೇಡ್ ತಂಡಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಗಮನ ಸೆಳೆದವು. ಇಲಾಖೆಗಳ ಯೋಜನೆಗಳು, ಸಾಧನೆಗಳು ಮತ್ತು ಜನಪರ ಕಾರ್ಯಕ್ರಮಗಳನ್ನು ಬಿಂಬಿಸುವ ಸ್ತಬ್ಧಚಿತ್ರಗಳು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾದವು. ಪರೇಡ್ ತಂಡಗಳು ಶಿಸ್ತುಬದ್ಧವಾಗಿ ಪಥಸಂಚಲನ ನಡೆಸಿ ಸಮಾರಂಭದ ಮೆರುಗು ಹೆಚ್ಚಿಸಿದವು.
ಈ ಸಂದರ್ಭದಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಪಿ. ರವಿಕುಮಾರ್, ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಬಿ.ಪಿ ಪ್ರಕಾಶ್, ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಉಪಾಧ್ಯಕ್ಷರಾದ ವಿಜಯಲಕ್ಷ್ಮಿ ರಘುನಂದನ್,ಜಿಲ್ಲಾಧಿಕಾರಿಗಳಾದ ಡಾ. ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ಕೆ. ಆರ್. ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳಾದ ಶೋಭಾರಾಣಿ ವಿ.ಜೆ, ಅಪರ ಜಿಲ್ಲಾಧಿಕಾರಿಗಳಾದ ಬಿ.ಸಿ ಶಿವಾನಂದಮೂರ್ತಿ,ಡಿವೈಎಸ್ಪಿ ಲಕ್ಷ್ಮೀನಾರಾಯಣ ಪ್ರಸಾದ್ ರವರು ಉಪಸ್ಥಿತರಿದ್ದರು.