ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ಕೆಂಪೇಗೌಡ ಸಭಾಂಗಣ, ಬೆಂಗಳೂರು ಇಲ್ಲಿ ಕರ್ನಾಟಕ ನೇತಾಜಿ ಚಾರಿಟಬಲ್ ಟ್ರಸ್ಟ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ 2025–26ನೇ ಸಾಲಿನ ‘ಭಗತ್ ಸಿಂಗ್ ಪ್ರಶಸ್ತಿ’ ಪ್ರದಾನ ಸಮಾರಂಭ ಅದ್ದೂರಿಯಾಗಿ ನಡೆಯಿತು.
ಸಮಾರಂಭದಲ್ಲಿ ಶಮೀರಾ ಸುಲ್ತಾನ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ, ಪ್ರಶಸ್ತಿ ಪುರಸ್ಕೃತರನ್ನು ಅಭಿನಂದಿಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಶಮೀರಾ ಸುಲ್ತಾನ ಅವರು, “ಭಗತ್ ಸಿಂಗ್ ಅವರ ದೇಶಪ್ರೇಮ, ತ್ಯಾಗ ಮತ್ತು ಆದರ್ಶಗಳು ಇಂದಿನ ಯುವಜನತೆಗೆ ಸದಾ ಪ್ರೇರಣೆಯಾಗಬೇಕು. ಸಮಾಜಕ್ಕೆ ನಮ್ಮಿಂದಾಗುವ ಸೇವೆಯೇ ನಿಜವಾದ ಸಾಧನೆ” ಎಂದು ಹೇಳಿದರು.
ಯುವಜನರು ದೇಶದ ಅಭಿವೃದ್ಧಿಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು, ಶಿಕ್ಷಣ, ಶಿಸ್ತು, ಸೇವಾ ಮನೋಭಾವ ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ನೇತಾಜಿ ಚಾರಿಟಬಲ್ ಟ್ರಸ್ಟ್‌ನ ಪದಾಧಿಕಾರಿಗಳು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರತಿನಿಧಿಗಳು, ಗಣ್ಯರು, ವಿವಿಧ ಕ್ಷೇತ್ರಗಳ ಸಾಧಕರು ಇದ್ದರು.