ಬಳ್ಳಾರಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟದ ವಿಸ್ತರಣೆಯಲ್ಲಿ ಉತ್ತರ ಕರ್ನಾಟಕ ಭಾಗದ ಕುರುಬ ಸಮುದಾಯದ ಶಾಸಕರಿಗೆ ಸೂಕ್ತ ಪ್ರಾತಿನಿಧ್ಯ ನೀಡಬೇಕು ಎಂದು ಬಳ್ಳಾರಿ ಜಿಲ್ಲಾ ಕುರುಬರ ಸಂಘ ಒತ್ತಾಯಿಸಿದೆ.
ನಗರದ ಪತ್ರಿಕಾ ಭವನದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಡಾ. ಪಿ.ಎಸ್. ಗಾದಿಲಿಂಗನಗೌಡ, ರಾಜ್ಯದಲ್ಲಿ ಕುರುಬ ಸಮುದಾಯದ 16 ಶಾಸಕರು ಆಯ್ಕೆಯಾಗಿದ್ದು, ಸಮುದಾಯದ ಸಂಖ್ಯಾಬಲ ಹಾಗೂ ರಾಜಕೀಯ ಕೊಡುಗೆಯನ್ನು ಪರಿಗಣಿಸಿ ಕನಿಷ್ಠ ನಾಲ್ವರಿಗೆ ಸಚಿವ ಸ್ಥಾನ ನೀಡಬೇಕಿತ್ತು. ಆದರೆ ಇದುವರೆಗೆ ಇಬ್ಬರಿಗೆ ಮಾತ್ರ ಅವಕಾಶ ದೊರೆತಿದ್ದು, ಉತ್ತರ ಕರ್ನಾಟಕ ಭಾಗದ ಒಬ್ಬರೂ ಸಚಿವ ಸಂಪುಟದಲ್ಲಿ ಸ್ಥಾನ ಪಡೆಯದಿರುವುದು ಸಮುದಾಯಕ್ಕೆ ತೀವ್ರ ನಿರಾಸೆ ಉಂಟುಮಾಡಿದೆ ಎಂದು ಹೇಳಿದರು.
ಸಚಿವ ಸಂಪುಟ ರಚನೆ ಸಂದರ್ಭದಲ್ಲಿ ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣನವರ್ ಅವರ ಹೆಸರು ಕಾಂಗ್ರೆಸ್ ಹೈಕಮಾಂಡ್ ಮಟ್ಟದಲ್ಲಿ ಚರ್ಚೆಯಾಗಿತ್ತು. ರಾಹುಲ್ ಗಾಂಧಿ, ಸಿದ್ದರಾಮಯ್ಯ ಹಾಗೂ ಕೆ.ಸಿ. ವೇಣುಗೋಪಾಲ್ ಅವರ ಪಟ್ಟಿಯಲ್ಲಿಯೂ ಹೆಸರು ಇದ್ದರೂ, ಅಂತಿಮ ಹಂತದಲ್ಲಿ ನಡೆದ ಬೆಳವಣಿಗೆಗಳಿಂದ ಅವರಿಗೆ ಸಚಿವ ಸ್ಥಾನ ಕೈತಪ್ಪಿದೆ ಎಂದು ಅವರು ಆರೋಪಿಸಿದರು.
ಇದೇ ವೇಳೆ ಇನ್ನೂ ಎಂಎಲ್ಸಿಯಾಗಿ ಅಧಿಕಾರ ಸ್ವೀಕರಿಸದ ಗಾಯತ್ರಿ ಶಾಂತೇಗೌಡ ಅವರ ಹೆಸರನ್ನು ಪಟ್ಟಿಗೆ ಸೇರಿಸಿರುವುದು ಗೊಂದಲಕ್ಕೆ ಕಾರಣವಾಯಿತು. ಈ ಕಾರಣದಿಂದ ಉತ್ತರ ಕರ್ನಾಟಕದ ಕುರುಬ ಸಮುದಾಯಕ್ಕೆ ದೊರೆಯಬೇಕಿದ್ದ ಅವಕಾಶ ತಪ್ಪಿಹೋಗಿದೆ ಎಂದು ಅವರು ದೂರಿದರು.
ಸಚಿವ ಸಂಪುಟದಲ್ಲಿ ಇನ್ನೂ ಒಂದು ಸ್ಥಾನ ಭರ್ತಿಯಾಗಬೇಕಿದ್ದು, ಆ ಸ್ಥಾನವನ್ನು ಉತ್ತರ ಕರ್ನಾಟಕದ ಕುರುಬ ಸಮುದಾಯದ ಅರ್ಹ ಶಾಸಕರಿಗೆ ನೀಡಬೇಕು. ಇಲ್ಲವಾದರೆ ಸಮುದಾಯದಲ್ಲಿ ಅಸಮಾಧಾನ ಮತ್ತಷ್ಟು ಹೆಚ್ಚಾಗಲಿದ್ದು, ಅದರ ರಾಜಕೀಯ ಪರಿಣಾಮವನ್ನು ಕಾಂಗ್ರೆಸ್ ಪಕ್ಷ ಮುಂದಿನ ಚುನಾವಣೆಯಲ್ಲಿ ಎದುರಿಸಬೇಕಾಗಬಹುದು ಎಂದು ಎಚ್ಚರಿಕೆ ನೀಡಿದರು.
ಸಿದ್ದರಾಮಯ್ಯ ಅವರು ಕಾಂಗ್ರೆಸ್‌ನಲ್ಲಿ ಇದ್ದ ಅವಧಿಯಿಡೀ ಕುರುಬ ಸಮುದಾಯದ ಬಹುಪಾಲು ಜನರು ಪಕ್ಷವನ್ನು ಬೆಂಬಲಿಸಿದ್ದಾರೆ. ಆದರೆ ಈಗ ಸಮುದಾಯಕ್ಕೆ ನಿರೀಕ್ಷಿತ ಗೌರವ ಹಾಗೂ ಪ್ರಾತಿನಿಧ್ಯ ಸಿಗುತ್ತಿಲ್ಲ ಎಂಬ ಭಾವನೆ ಮೂಡಿದೆ. ಈ ಅಸಮಾಧಾನವನ್ನು ಪಕ್ಷದ ವರಿಷ್ಠರು ಗಂಭೀರವಾಗಿ ಪರಿಗಣಿಸಿ ನ್ಯಾಯ ಒದಗಿಸಬೇಕು ಎಂದು ಅವರು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿ.ಎಂ. ಪಾಟೀಲ್, ಉತ್ತರ ಕರ್ನಾಟಕದ ಕುರುಬ ಸಮುದಾಯವು ಕಾಂಗ್ರೆಸ್ ಪಕ್ಷದ ಬಲಿಷ್ಠ ಸಾಮಾಜಿಕ ಆಧಾರವಾಗಿದೆ. ಚುನಾವಣೆಗಳಲ್ಲಿ ಪಕ್ಷದ ಗೆಲುವಿಗೆ ಸಮುದಾಯದ ಪಾತ್ರ ಮಹತ್ವದ್ದಾಗಿದೆ. ಆದರೂ ಸಚಿವ ಸಂಪುಟದಲ್ಲಿ ಉತ್ತರ ಕರ್ನಾಟಕಕ್ಕೆ ಪ್ರಾತಿನಿಧ್ಯ ನೀಡದಿರುವುದು ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ಹೇಳಿದರು.
ಸಚಿವ ಸಂಪುಟ ವಿಸ್ತರಣೆ ವೇಳೆ ಸಾಮಾಜಿಕ ನ್ಯಾಯ, ಪ್ರಾದೇಶಿಕ ಸಮತೋಲನ ಮತ್ತು ಸಮುದಾಯದ ಕೊಡುಗೆಯನ್ನು ಪರಿಗಣಿಸುವುದು ಅಗತ್ಯ. ಇನ್ನೂ ಅವಕಾಶ ಇರುವುದರಿಂದ ಮುಖ್ಯಮಂತ್ರಿ ಹಾಗೂ ಪಕ್ಷದ ವರಿಷ್ಠರು ಈ ಬೇಡಿಕೆಯನ್ನು ಸಕಾರಾತ್ಮಕವಾಗಿ ಪರಿಗಣಿಸಿ ಉತ್ತರ ಕರ್ನಾಟಕದ ಕುರುಬ ಸಮುದಾಯದ ಶಾಸಕರಿಗೆ ಸಚಿವ ಸ್ಥಾನ ನೀಡಬೇಕು ಎಂದು ಅವರು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಸಿಂದವಾಳ ಗಾದಿಲಿಂಗನಗೌಡ, ನಾಗೇನಹಳ್ಳಿ ಮಲ್ಲಿಕಾರ್ಜುನ, ಸೋಮಪ್ಪ, ರಾಮಲಿಂಗ, ರಾಜು, ವಿಜಯ್ ಕುಮಾರ್ ಸೇರಿದಂತೆ ಕುರುಬ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.